ಉಡುಪಿ: ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಗೀತೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಇದೇ ಡಿ.7ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಗೀತಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ವಿಶ್ವಗೀತಾ ಪರ್ಯಾಯ ಮಹೋತ್ಸವದ ಅಂಗವಾಗಿ ಡಿ. 13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಅಮೇರಿಕಾದ ವರ್ಲ್ಡ್ ರಿಲೀಜಿಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ. ವಿಲಿಯಂ ಎಫ್. ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀಮಧುಸೂದನ ಸಾಯಿ, ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಚಿಂತಕರಾದ ರೋಹಿತ್ ಚಕ್ರತೀರ್ಥ ಹಾಗೂ ಡಾ. ಸುಧೀರ್ ರಾಜ್ ಕೆ. ವಿಚಾರ ಮಂಡಿಸುವರು. ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದು, ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದರು.
ಅಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸುತ್ತಾರೆ. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದೆಂದು ತಿಳಿಸಿದರು.
ಗೀತೋತ್ಸವ ಅಂಗವಾಗಿ ಡಿ. 6 ರಂದು 18 ಕುಂಡಗಳಲ್ಲಿ ಗೀತಾ ಯಜ್ಞ ನಡೆಯಲಿದೆ. ರಾಜಾಂಗಣದಲ್ಲಿ ಬೆಳಗ್ಗೆ 6 ಗಂಟೆಯಿಂದ ಆರಂಭವಾಗುವ ಕಾರ್ಯಕ್ರಮದಲ್ಲಿ 18 ಮಂದಿ ಋತ್ವಿಜರು ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳ ಮೂಲಕ ಆಹುತಿ ನೀಡುವರು ಎಂದು ಪ್ರಸನ್ನ ಆಚಾರ್ಯ ವಿವರಿಸಿದರು.
ಡಿ.7 ರಿಂದ 13 ರ ವರೆಗೆ ಇಸ್ಕಾನ್ ನವರಿಂದ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಡಿ.27 ರಂದು ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ನಡೆಯಲಿದೆ. ಕೋಟಿ ಗೀತಾ ಲೇಖನ ಯಜ್ಞಕ್ಕೆ ಸಂಬಂಧಿಸಿ ಭಕ್ತಾಧಿಗಳಿಂದ ಸಾಕಷ್ಟು ಬೇಡಿಕೆಗಳಿದ್ದು, ಈ ಯೋಜನೆ ಮುಂದಿನ ಎರಡು ವರ್ಷ ಕಾಲ ಮುಂದುವರಿಯಲಿದೆ. ಆನ್ಲೈನ್ ಗೀತಾ ರಸಪ್ರಶ್ನೆ ನಡೆಯುತ್ತಿದ್ದು, 5 ಲಕ್ಷ ಬಹುಮಾನ ಇದೆ ಎಂದು ಶ್ರೀಗಳು ತಿಳಿಸಿದರು.

















