ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಯಾದಗಿರಿ: ವಸತಿ ನಿಲಯವೊಂದರ ಶೌಚಾಲಯದಲ್ಲಿಯೇ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆಯಾಗಿದ್ದು, ಗಂಡುಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ.

ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ ತಿಳಿದ ತಕ್ಷಣವೇ ನಗರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಮಕ್ಕಳ ಹಕ್ಕುಗಳ ಆಯೋಗದ ವತಿಯಿಂದ ಅಧಿಕಾರಿಗಳನ್ನು ಆಸ್ಪತ್ರೆಗೆ ಕಳುಹಿಸಿ ಸಮಗ್ರ ಮಾಹಿತಿಯನ್ನು ಕಲೆಹಾಕಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಗರ್ಭ ಧರಿಸಲು ಕಾರಣ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಕೂಡ ಈ ವಿಚಾರದ ಬಗ್ಗೆ ನಮ್ಮ ಬಳಿ ಹೇಳುತ್ತಿಲ್ಲ ಎಂದು ಶಾಲೆಯ ಮೇಲ್ವಿಚಾರಕಿ ತಿಳಿಸಿದ್ದಾರೆ.

ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.