ಫೆ.6 ರಂದು ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ; ರಾಜ್ಯಮಟ್ಟದ ಯಕ್ಷಗಾನ ಸ್ಪರ್ಧೆ

ಮೂಡಬಿದ್ರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24 ಕಾರ್ಯಕ್ರಮವು ಫೆ.6 ರಂದು ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿದೆ.

ಆ ಪ್ರಯುಕ್ತ ರಾಜ್ಯಮಟ್ಟದ ಯಕ್ಷಗಾನ ಸ್ಪರ್ಧೆಯನ್ನು ಆಯೋಜಿಸಲಾಗುವುದು. 6 ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಸ್ಪರ್ಧೆಗಳಲ್ಲಿ ರಾಜ್ಯದ ಯಾವುದೇ ಸರಕಾರಿ, ಅನುದಾನಿತ, ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ. ಕಾಸರಗೋಡು ಸಹಿತ ಇತರ ಹೊರ ರಾಜ್ಯಗಳ ಶಾಲಾ ವಿದ್ಯಾರ್ಥಿಗಳಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ 38 ಶಾಲೆಗಳಲ್ಲಿ ಸುಮಾರು 3000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣವನ್ನು ನೀಡಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ವೇದಿಕೆಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.