ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7ನೇ ತಾರೀಖಿನವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ.
ಮುಖ್ಯವಾಗಿ ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಸೆ. 3 ಮತ್ತು 4 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಗಳಿಗೆ ಇಂದು ಮತ್ತು ರಾಯಚೂರು ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಹವಾಮಾನ ಇಲಾಖೆ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವುಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ ಇಲ್ಲ: ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗಿದೆ. ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯು ಬರುವ ಸಾಧ್ಯತೆ ಇದೆ. ಆದರೆ ಈ ದಿನಗಳಲ್ಲಿ ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.
ಸಿಲಿಕಾನ್ ಸಿಟಿಯಲ್ಲೂ ಮಳೆ: ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೊಂಚ ವಿರಾಮ ನೀಡಿರುವ ಮಳೆರಾಯ ಸೆಪ್ಟೆಂಬರ್ 6 ಮತ್ತು 7ರಂದು ಭೋರ್ಗರೆಯಲ್ಲಿದ್ದಾನೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸೆ. 6 ಮತ್ತು 7 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.