ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್
ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಶುದ್ಧ ನಳ್ಳಿ ನೀರು ಸಂಪರ್ಕ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿ.ಪಂ. ಕಚೇರಿಯಲ್ಲಿ ನಡೆದ, ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯತ್‌ಗಳ 246 ಗ್ರಾಮಗಳಲ್ಲಿನ 2,42,526 ಮನೆಗಳ ಒಟ್ಟು 10,32,277 ಜನರಿಗೆ ದೈನಂದಿನ ಬಳಕೆಗಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿದ್ದು, ಈ ಬಗ್ಗೆ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು 2023 ನೇ ಸಾಲಿನ ಒಳಗೆ ಮುಗಿಸಿ, ನಿಗದಿತ ಅವಧಿಯೊಳಗೆ ಗುರಿ ಸಾಧನೆಗೆ ಅಗತ್ಯವಿರುವ
ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಹೇಳಿದರು.
ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ನೀಡಿದ ನಂತರ, ನೀರಿನ ಸಮರ್ಪಕ ಬಳಕೆ ಕುರಿತು ಪರಿಶೀಲಿಸಲು ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವಂತೆ ಹಾಗೂ ಅನಗತ್ಯವಾಗಿ ನೀರು ಪೋಲಾಗದಂತೆ ಅರಿವು ಮೂಡಿಸಿ, ಆಗಾಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.












