ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಗೋವಿಂದ ಪೈ ಸಂಶೋಧನ ಸಂಪುಟ-1’ ಕೃತಿಯ ಬಿಡುಗಡೆ ಸಮಾರಂಭ ಇದೇ ನ.16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಕೃತಿ ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಲಹಾಸಮಿತಿಯ ಅಧ್ಯಕ್ಷ ಡಾ. ಬಿ.ಎ. ವಿವೇಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ. ಎನ್.ಎಸ್. ತಾರಾನಾಥ ಸಂಪುಟದ ಕುರಿತು ಮಾತನಾಡಲಿದ್ದಾರೆ. ಕಾರ್ಕಳ ಶಾಸಕ ಸುನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗೋವಿಂದ ಪೈ ಸಂಶೋಧನ ಸಂಪುಟದ ಸಂಪಾದಕರಾದ ಪ್ರೊ. ಮುರಳೀಧರ ಉಪಾಧ್ಯ, ಡಾ. ಪಾದೇಕಲ್ಲು ವಿಷ್ಣುಭಟ್, ಸಂಶೋಧಕ ಡಾ. ಅರುಣ್ ಕುಮಾರ್ ಎಸ್. ಉಪಸ್ಥಿತರಿದ್ದರು.