ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜ್ಯ ಶಾಸ್ತ್ರ
ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲ್ಪಡುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಶನಿವಾರ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ
ಡಾ ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.
ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಗುಂಡಿಬೈಲು ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ತರಬೇತಿಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು.
ಇನ್ನೊರ್ವ ಮುಖ್ಯ ಅತಿಥಿಯಾದ ನಗರ ಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಮಾತನಾಡಿ, ಸಕಾರಾತ್ಮನೆ ಯೋಚನೆ, ಶಿಸ್ತು, ಜೀವನದಲ್ಲಿ ರೂಢಿಸಿಕೊಳ್ಳಿ, ಇಂತಹ ಉತ್ತಮ ಕಾರ್ಯಗಾರವನ್ನು ನೀಡುತ್ತಿರುವುದು ನಿಜಕ್ಕೂ ಪ್ರಶಂಶಿಸುವ ವಿಷಯ ಎಂದರು.
ತೆಂಕನಿಡಿಯೂರು ಸ.ಪ್ರ.ದ.ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್, ಕಾಲೇಜಿನ ಮುಖ್ಯಸ್ಥ ಪಶ್ರಾಂತ್ ನೀಲಾವರ, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕಿ
ರಂಜಿತ ಸಿ. ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.