ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ರಜತಾದ್ರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು ಗುರುವಾರ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಇದು” ಎಂಬ ಘೋಷವಾಕ್ಯದೊಂದಿಗೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಲತಾ ನಾಯಕ್ ಮಾತನಾಡಿ, ಪ್ರಪಂಚದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ ಜೀವನದ ಗುಣಮಟ್ಟವನ್ನು ಉತ್ತಮಗೊಳಿಸುವುದು ಮಾನಸಿಕ ಆರೋಗ್ಯ ದಿನದ ಉದ್ದೇಶವಾಗಿದೆ ಎಂದರು.
ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ.ಋತಿಕಾ ಸಾಲ್ಯಾನ್ ಹಾಗೂ ಕ್ಲೀನಿಕಲ್ ಸೈಕಾಲಜಿಸ್ಟ್ ತರಿನ್ ಜೆನಿಫರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರ್ ವಿ ನಾಯಕ್ ಹಾಗೂ ವಿಜಯ ನಾಯಕ್, ಸೋಶಿಯಲ್ ವರ್ಕರ್ ಸೈಕ್ಯಾಟ್ರಿಕ್ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಭಾರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ದೀಪ ನಿರೂಪಿಸಿ, ಶಾರದಾ ವಂದಿಸಿದರು.












