ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಮ ಮಂದಿರ ಹೋರಾಟದಲ್ಲಿ ಕರಸೇವಕರಾಗಿದ್ದ ಶ್ರೀಕಾಂತ್ ಪೂಜಾರಿಯವರನ್ನು 30 ವರ್ಷಗಳ ಬಳಿಕ ಬಂಧಿಸಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಅವರನ್ನು ಇಂದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಕಾಂತ್ ಪೂಜಾರಿ ಬಂಧನವನ್ನು ವಿರೀಧಿಸಿ ಬಿಜೆಪಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆ ಮುಂಭಾಗದಲ್ಲಿ ಸುನಿಲ್ ಕುಮಾರ್ ಇಂದು ಬೆಳಗ್ಗೆ ಏಕಾಂಗಿಯಾಗಿ ಧರಣಿ ಕುಳಿತಿದ್ದರು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಾನೂ ಕೂಡ ಕರಸೇವಕ ನನ್ನನ್ನೂ ಬಂಧಿಸಿ ಎಂದು ಪ್ರತಿಭಟನೆ ನಡೆಸಿದರು.
ಸರಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸುನಿಲ್ ಕುಮಾರ್ ರಾಮ ಮಂದಿರದ ವಿರುದ್ಧ ನಿರಂತರವಾಗಿ ಹೇಳಿಕೆ ನೀಡಿ ಹಿಂದೂಗಳನ್ನು ಅವಮಾನಿಸುತ್ತಿರುವ ಕಾಂಗ್ರೆಸ್ ಇದರ ಭಾಗವಾಗಿ ಕರಸೇವಕರನ್ನು ಬಂಧಿಸಿ ಜೈಲಿಗಟ್ಟುತ್ತಿದೆ. ಇದಕ್ಕೆ ಕಾಂಗ್ರೆಸ್ ಸರಿಯಾದ ಬೆಲೆ ತೆರಲಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಪೊಲೀಸರು ಸುನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡರು.