ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಎಡಿಸಿ ಮಮತಾ ದೇವಿ ಜಿ.ಎಸ್

ಉಡುಪಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅಕ್ಟೋಬರ್ 26 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅಕ್ಟೋಬರ್ 27 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ನಡೆಸಲಾಗುವ ಪರೀಕ್ಷೆಗೆ ಸಂಬಂಧಿಸಿಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡಲಾದ ತಂಡಗಳು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಗೆ ಸಂಬಂಧಿಸಿದಂತೆ ಅಕ್ಟೋಬರ್ 26 ರಂದು ಉಡುಪಿ ತಾಲೂಕಿನ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2.30 ರಿಂದ 4.30ರ ವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು 797 ಅಭ್ಯರ್ಥಿಗಳು ಹಾಗೂ ಅಕ್ಟೋಬರ್ 27 ರಂದು ಜಿಲ್ಲೆಯ 13 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಅವಧಿಗಳಲ್ಲಿ ಬೆಳಗ್ಗೆ 10.30 ರಿಂದ ಮ. 12.30 ರ ವರೆಗೆ ಮತ್ತು ಮಧ್ಯಾಹ್ನ 2.30 ರಿಂದ 4.30 ರ ವರೆಗೆ ನಡೆಯಲಿದ್ದು, ಒಟ್ಟು 6004 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪೆನ್‌ಡ್ರೈವ್, ಮೈಕ್ರೋಫೋನ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟವಾಚ್ ಸೇರಿದಂತೆ ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಹಾಗೂ ಸ್ಟೇಷನರೀಸ್, ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದರು.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ತುಂಬು ತೋಳಿನ ಶರ್ಟ್, ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್ ಮೆಟಲ್ (ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ, ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟನ್‌ಗಳು ಇರಬಾರದು. ಪರೀಕ್ಷೆ ವೇಳೆಯಲ್ಲಿ ಶೂ, ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬಹುದಾಗಿದೆ ಎಂದ ಅವರು, ಯಾವುದೇ ರೀತಿಯ ಫೇಸ್ ಮಾಸ್ಕ್ ಹಾಗೂ ತಲೆಯ ಮೇಲೆ ಟೋಪಿ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಬಾರದು ಎಂದರು.

ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಲು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವೀಕ್ಷಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಖಜಾನಾಧಿಕಾರಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ತಮಗೆ ನೀಡಿರುವ ಕರ್ತವ್ಯಗಳನ್ನು ಉತ್ತಮ ರೀತಿಯಲ್ಲಿ ನ್ಯಾಯೋಚಿತವಾಗಿ ನಿರ್ವಹಿಸಬೇಕು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯುವ ಸಮಯದಲ್ಲಿ ಉಸ್ತುವಾರಿ ತಂಡಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕೆಂದರು.

ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗುವುದು.

ಈ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸುವುದನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದರು. ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಧಿಕಾರವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದ ಅವರು, ಪರೀಕ್ಷಾ ಕೇಂದ್ರಗಳಿಗೆ, ಗೋಡೆ ಗಡಿಯಾರಗಳ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ, ಪರೀಕ್ಷಾ ಸಮಿತಿಯ ಸದಸ್ಯರುಗಳ ನಿರ್ವಹಿಸಬೇಕಾದ ವಿವಿಧ ಕರ್ತವ್ಯಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಎಎಸ್‌ಪಿ ಟಿ. ಸಿದ್ದಲಿಂಗಪ್ಪ, ಡಿಡಿಪಿಯು ಮಾರುತಿ, ತಾಲೂಕುಗಳ ತಹಶೀಲ್ದಾರ್‌ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.