ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು “ಸ್ವಂತ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜೂನ್ 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ (ಲಾನ್ ಟೆನಿಸ್) ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ ಹಾಗೂ ಡಾ. ಧನಂಜಯ ಸರ್ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಬೆಂಗಳೂರು ಆಯುಷ್ ನಿರ್ದೇಶನಾಲಯದ ಆಯುಕ್ತ ಶ್ರೀನಿವಾಸಲು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಭಾರತೀಯ ಸಂಸ್ಕೃತಿಯ ಬಹುಮುಖ್ಯವಾದ ಅಂಗವಾದ ಯೋಗವು ಮಾನವನ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡಿದೆ. ಆದುದರಿಂದಲೇ ವಿಶ್ವದಾದ್ಯಂತ ಜನಮನ್ನಣೆಯನ್ನು ಪಡೆದಿದ್ದು, ಇಂದಿನ ಯುವಜನಾಂಗಕ್ಕೆ ಯೋಗದ ಬಗ್ಗೆ ಅರಿವನ್ನು ಉಂಟುಮಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಹತ್ತನೇ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧೆಡೆ ಆಸಕ್ತರಿಗೆ ಯೋಗ ತರಬೇತಿ ಹಾಗೂ ಆಯುಷ್ ಚಿಕಿತ್ಸಾ ಪದ್ಧತಿಗಳ ಬಗ್ಗೆ ಅರಿವನ್ನು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆಚರಿಸಲಾಗುತ್ತಿದೆ.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಆಸಕ್ತ ಸಾರ್ವಜನಿಕರಿಗೆ ಆಯುಷ್ ಮಂತ್ರಾಲಯದಿಂದ ನೀಡಲ್ಪಟ್ಟ 45 ನಿಮಿಷಗಳ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.